ಸುಬ್ರಹ್ಮಣ್ಯ:ಪಡ್ಡಿನಂಗಡಿ ಶಿವಗೌರಿ ಕಲ್ಯಾಣ ಮಂಟಪದ ಮಾಲಕ ಹಾಗೂ ಸಮಾಜ ಸೇವಕ ಸುರೇಶ್ ಕುಮಾರ್ ನಡ್ಕ (60) ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೆಲವು ತಿಂಗಳುಗಳ ಹಿಂದೆ ಸುರೇಶ್ ಕುಮಾರ್ ನಡ್ಕ ಅವರಿಗೆ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಶಸ್ತ್ರಚಿಕಿತ್ಸೆಯ ಬಳಿಕ ಮೂರು ತಿಂಗಳ ವಿಶ್ರಾಂತಿ ಪಡೆದು ಮನೆಗೆ ಮರಳಿದ್ದರು. ಆದರೆ ಇತ್ತೀಚೆಗೆ ಮತ್ತೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಪುನಃ ಬೆಂಗಳೂರಿಗೆ ಕರೆದೊಯ್ಯಲಾಗಿದ್ದು, ಅಲ್ಲಿ ಭಾನುವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದರು.
ಹಿರಿಯ ಜಾನಪದ ವಿದ್ವಾಂಸ ಡಿ. ಜಿ. ನಡ್ಕರವರ ಪುತ್ರರಾಗಿದ್ದ ಸುರೇಶ್ ಕುಮಾರ್ ನಡ್ಕ ಅವರು ನಾಯಕತ್ವ ಗುಣ, ಸಮಾಜಮುಖಿ ಚಟುವಟಿಕೆಗಳಿಂದ ಚಿರಪರಿಚಿತರಾಗಿದ್ದರು.
ಅವರು ಕಲ್ಮಡ್ಕ ಗ್ರಾಮ ಪಂಚಾಯತ್ ಸದಸ್ಯರಾಗಿಯೂ, ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದು, ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಹಾಗೂ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಪಂಜ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಹಾಗೂ ಪಂಜ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಸಮಾಜ ಸೇವೆಯಲ್ಲಿ ಸಕ್ರಿಯರಾಗಿದ್ದರು.
ಪಡಪ್ಪಿನಂಗಡಿ ಯುವಕ ಮಂಡಲ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲ ಸದಸ್ಯರಾಗಿ ಕಾರ್ಯನಿರ್ವಹಿಸಿ ಅನೇಕ ಯುವಕರಿಗೆ ಪ್ರೇರಣೆಯಾಗಿ ನಿಂತಿದ್ದರು. ಆರಂಭದಿಂದಲೂ ಜೆಡಿಎಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಅವರು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸಿದ್ದರು.
ಪಡ್ಡಿನಂಗಡಿಯಲ್ಲಿ ಶಿವಗೌರಿ ಕಲ್ಯಾಣ ಮಂಟಪವನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಮಟ್ಟದಲ್ಲಿ ಜನರಿಗೆ ಅಗತ್ಯ ಸೇವೆ ಒದಗಿಸಿದವರು ಎಂದು ಹೆಸರು ಪಡೆದಿದ್ದರು.
ಮೃತರು ಪತ್ನಿ ಮಮತಾ, ಪುತ್ರಿಯರಾದ ಸಂಜನಾ (ಸಂದೀಪ್ ಬಿರ್ಮುಕಜೆ), ತಸ್ಮಯಿ, ಅಳಿಯ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯಸಂಸ್ಕಾರವನ್ನು ಸೋಮವಾರ ಬೆಳಿಗ್ಗೆ 9 ಗಂಟೆಗೆ ಅವರ ಸ್ವಗೃಹದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ. ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸೋಮವಾರ ಬೆಳಿಗ್ಗೆ ಅವಕಾಶ ಕಲ್ಪಿಸಲಾಗುತ್ತದೆ.
Post a Comment