ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ರಥ ಬೀದಿಯಲ್ಲಿ ಭಕ್ತನೊಬ್ಬನ ಮೇಲೆ ಸೌಟಿನಿಂದ ಹಲ್ಲೆ ನಡೆಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ, ರಥ ಬೀದಿಯಲ್ಲಿ ಬೀದಿಬದಿ ವ್ಯಾಪಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಭಕ್ತನಿಗೆ ಸೌಟಿನಿಂದ ಹೊಡೆಯುತ್ತಿರುವ ದೃಶ್ಯಗಳು ಸ್ಪಷ್ಟವಾಗಿ ಕಾಣುತ್ತಿವೆ. ಪವಿತ್ರ ಕ್ಷೇತ್ರದಲ್ಲಿ ಭಕ್ತರ ಮೇಲೆಯೇ ಈ ರೀತಿಯ ದೈಹಿಕ ಹಲ್ಲೆ ನಡೆಸಿರುವುದು ಅತ್ಯಂತ ಖಂಡನೀಯ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ರಥ ಬೀದಿ ತುಂಬಾ ಅನಧಿಕೃತ ಹಾಗೂ ನಿಯಂತ್ರಣವಿಲ್ಲದ ಬೀದಿಬದಿ ವ್ಯಾಪಾರಿಗಳಿದ್ದು, ಇವರು ಭಕ್ತರಿಗೆ ಕಿರಿಕಿರಿ ಉಂಟುಮಾಡುವುದರ ಜೊತೆಗೆ ಹಲ್ಲೆ ನಡೆಸುತ್ತಿದ್ದಾರೆ ಎಂಬ ಆರೋಪಗಳು ಹಿಂದಿನಿಂದಲೂ ಕೇಳಿಬರುತ್ತಿವೆ. ಇಂತಹ ಘಟನೆಗಳು ಕ್ಷೇತ್ರದ ಪಾವಿತ್ರ್ಯ ಮತ್ತು ಭಕ್ತರ ಸುರಕ್ಷತೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ.
ಇಷ್ಟೆಲ್ಲ ಬೆಳವಣಿಗೆಗಳ ನಡುವೆಯೂ, ಈ ರೀತಿಯ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ವಹಿಸಬೇಕಾದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಈವರೆಗೂ ಮೌನ ವಹಿಸಿರುವುದು ಯಾಕೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.
ಕ್ಷೇತ್ರದ ಶಾಂತಿ, ಭಕ್ತರ ಭದ್ರತೆ ಮತ್ತು ನಿಯಂತ್ರಣ ವ್ಯವಸ್ಥೆಗಳನ್ನು ಜಾರಿಗೆ ತರುವ ಜವಾಬ್ದಾರಿ ದೇವಸ್ಥಾನ ಆಡಳಿತದ ಮೇಲಿದೆ. ಆದರೆ ಬೀದಿಬದಿ ಅಂಗಡಿಗಳಿಗೆ ಅವಕಾಶ ನೀಡಿ, ಅದರಿಂದ ಭಕ್ತರ ಮೇಲೆಯೇ ಹಲ್ಲೆ ನಡೆಯುತ್ತಿದ್ದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳದಿರುವುದು ನಾಗರಿಕರಲ್ಲಿ ಅಸಮಾಧಾನ ಮೂಡಿಸಿದೆ.
ಈ ಪ್ರಕರಣದ ಕುರಿತು ದೇವಸ್ಥಾನ ಆಡಳಿತ ಹಾಗೂ ಸಂಬಂಧಿಸಿದ ಇಲಾಖೆಗಳು ಯಾವ ರೀತಿಯ ಕ್ರಮ ಕೈಗೊಳ್ಳಲಿವೆ ಎಂಬುದನ್ನು ಕಾದು ನೋಡಬೇಕಿದೆ. ಜೊತೆಗೆ, ಪವಿತ್ರ ಕ್ಷೇತ್ರದಲ್ಲಿ ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ನಿಯಂತ್ರಣ ಹಾಗೂ ಭಕ್ತರ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
إرسال تعليق