ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಹಿನ್ನೆಲೆ ಕುಕ್ಕೆ ಶ್ರೀ ದೇವರಲ್ಲಿ ವಿಶೇಷ ಪೂಜೆ.
ಸುಬ್ರಹ್ಮಣ್ಯ, ಜೂನ್ 3: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರ ಯಶಸ್ವಿ ಆಡಳಿತ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.
ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ, ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಹಿರಿಯ ಕಾರ್ಯಕರ್ತರು ಶ್ರೀ ದೇವರ ಸನ್ನಿಧಿಯಲ್ಲಿ ಭಕ್ತಿಪೂರ್ವಕವಾಗಿ ಪ್ರಾರ್ಥನೆ ಸಲ್ಲಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಯುರಾರೋಗ್ಯ, ಯಶಸ್ಸು ಮತ್ತು ಜನಪರ ಆಡಳಿತ ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬೇಡಿಕೊಂಡರು. ಇದೇ ಸಂದರ್ಭದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ., “ಕರ್ನಾಟಕದ ಜನತೆ ಅಪಾರ ನಿರೀಕ್ಷೆಯೊಂದಿಗೆ ಹೊಸ ನಾಯಕತ್ವವನ್ನು ಸ್ವಾಗತಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಿ ಜನಪರ ಆಡಳಿತ ನೀಡಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಯುವಜನರ ಆಶೋತ್ತರಗಳಿಗೆ ಸ್ಪಂದಿಸುವ ಆಡಳಿತವನ್ನು ಅವರು ನೀಡುವರು. ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಅಭಿವೃದ್ಧಿಯ ವಾತಾವರಣ ನಿರ್ಮಾಣವಾಗಲಿ ಎಂಬ ಆಶಯದೊಂದಿಗೆ ಇಂದು ಶ್ರೀ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದೇವೆ. ಪಕ್ಷದ ಕಾರ್ಯಕರ್ತರ ಶ್ರಮಕ್ಕೆ ಗೌರವ ಸಿಗುವಂತ ಆಡಳಿತ ರೂಪುಗೊಳ್ಳಲಿ. ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ಸರ್ಕಾರವಾಗಲಿ. ಕರ್ನಾಟಕ ದೇಶದ ಮಾದರಿ ರಾಜ್ಯವಾಗಿ ಬೆಳೆಯುವಲ್ಲಿ ಮುಖ್ಯಮಂತ್ರಿಗಳ ನಾಯಕತ್ವ ಮಹತ್ವದ ಪಾತ್ರ ವಹಿಸಲಿದೆ. ಅವರ ಕಾರ್ಯಗಳಿಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಅನುಗ್ರಹ ಸದಾ ಇರಲಿ ಎಂದು ಪ್ರಾರ್ಥಿಸಿದ್ದೇವೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಸುತ್ತುಗುಂಡಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಡಾ. ರಘು, ಲೀಲಾ ಮನಮೋಹನ್, ಪ್ರವೀಣಾ ಮರುವಂಜ, ಸೌಮ್ಯ ಭರತ್, ಮಾಸ್ಟರ್ ಪ್ಲಾನ್ ಸದಸ್ಯರಾದ ಲೋಲಾಕ್ಷ ಕೈಕಂಬ, ಸತೀಶ್ ಕೂಜಿಗೋಡು, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಕೈಕುರೆ, ಮುಖಂಡರಾದ ವೆಂಕಟ್ರಮಣ ಪಾಂಗ, ಭವಾನಿ ಶಂಕರ್, ಸುಬ್ರಮಣ್ಯ ಭಟ್, ಗೋಪಾಲ್ ಎಣ್ಣೆಮಜಲು ಹಾಗೂ ಇತರರು ಉಪಸ್ಥಿತರಿದ್ದರು.
Comments
Post a Comment